FASTNEWS
JUNE 19, 2024

ನವದೆಹಲಿ: ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಉದ್ಘಾಟನೆಗೆ ಸಿದ್ಧವಾಗಿದ್ದ ಸೇತುವೆ ಕುಸಿದಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇಲ್ಲಿ ಕುಸಿದಿರುವ ಸೇತುವೆಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಡಿಯಲ್ಲಿ ನಿರ್ಮಿಸಲಾಗಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ ನೀಡಿದ್ದಾರೆ.
ಬಿಹಾರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯವು ಈ ಸೇತುವೆಯ ನಿರ್ಮಾಣದ ಉಸ್ತುವಾರಿ ವಹಿಸಿಕೊಂಡಿದೆ ಎಂದು ಗಡ್ಕರಿ ಹೇಳಿದ್ದಾರೆ.
ಬಿಹಾರದ ಅರಾರಿಯಾದಲ್ಲಿ ಕುಸಿದ ಸೇತುವೆಯನ್ನು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯದ ಅಡಿಯಲ್ಲಿ ನಿರ್ಮಿಸಲಾಗಿಲ್ಲ. ಅದರ ಕೆಲಸವು ಬಿಹಾರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ನಡೆಯುತ್ತಿದೆ ಎಂದು ನಿತಿನ್ ಗಡ್ಕರಿ ಅವರ ಕಚೇರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
183 ಮೀಟರ್ ಉದ್ದದ ಸೇತುವೆಯ ಕಾಮಗಾರಿ ಪೂರ್ಣಗೊಂಡು, ಶೀಘ್ರದಲ್ಲೇ ಸಂಚಾರಕ್ಕೆ ತೆರೆದುಕೊಳ್ಳುವ ನಿರೀಕ್ಷೆಯಿತ್ತು. ಆದರೆ, ಇಂದು ಸಂಜೆ ಆ ಸೇತುವೆ ಕುಸಿದುಬಿದ್ದಿತ್ತು. 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆ ನೆಲಸಮವಾಗಿರುವುದನ್ನು ಹಲವು ರಾಜಕೀಯ ನಾಯಕರು ಹಾಗೂ ಸಾರ್ವಜನಿಕರು ಟೀಕಿಸಿದ್ದರು.
Share