FASTNEWS
JULY 11, 2024

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಮುಂದುವರೆದಿದ್ದು, ನಿನ್ನೆ ಒಂದೇ ದಿನ 293 ಮಂದಿಗೆ ಡೆಂಗ್ಯೂ ಸೋಂಕು ದೃಢಪಟ್ಟಿದೆ. ಒಟ್ಟು ವರದಿಯಾದ ಪ್ರಕರಣಗಳ ಸಂಖ್ಯೆ 7,840ಕ್ಕೆ ಏರಿಕೆಯಾಗಿದೆ.

ಪ್ರಸಕ್ತ ಸಾಲಿನಲ್ಲಿ ಈವರೆಗೆ 58534 ಮಂದಿಗೆ ರಕ್ತ ಮಾದರಿ ಪರೀಕ್ಷೆ ನಡೆಸಿದ್ದು 7840 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ. ಜತೆಗೆ ಏಳು ಮಂದಿ ಅಧಿಕೃತವಾಗಿ ಸೋಂಕಿಗೆ ಬಲಿಯಾಗಿದ್ದಾರೆ.
ಬುಧವಾರ 1,874 ಮಂದಿಗೆ ಪರೀಕ್ಷೆ ನಡೆಸಿದ್ದು 293 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ. ಈ ಪೈಕಿ ಒಂದು ವರ್ಷದೊಳಗಿನ ಮಕ್ಕಳಲ್ಲಿ ಇಬ್ಬರಿಗೆ ಡೆಂಗ್ಯೂ ವರದಿಯಾಗಿದೆ.
ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳ ಹೆಚ್ಚಳವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಉತ್ತಮ ವಾತಾವರಣದಲ್ಲಿ ಬದುಕುವುದು ಮೂಲಭೂತ ಹಕ್ಕು ಎಂದಿದೆ.
ಬುಧವಾರ ಕಲಾಪ ಪ್ರಾರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರ ನೇತೃತ್ವದ ವಿಭಾಗೀಯ ಪೀಠ ವಿಷಯ ಪ್ರಸ್ತಾಪಿಸಿತು. ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿ ಮಾಡಿ ಜುಲೈ 23ರೊಳಗೆ ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಾಲಯ ಆದೇಶಿಸಿದೆ.
Share