ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿ ಸುಮಾರು ಐದು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರಿಗೆ ಕೊನೆಗೂ ಸೆರೆಮನೆ ವಾಸದಿಂದ ಮುಕ್ತಿ ಸಿಕ್ಕಿದೆ.
ಹೈಕೋರ್ಟ್ ಪೀಠ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವೈದ್ಯಕೀಯ ಚಿಕಿತ್ಸೆಯ ಆಧಾರದಲ್ಲಿ ಹೈಕೋರ್ಟ್ ನ್ಯಾಯಾಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ಅವರು, ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಇದೀಗ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ. ಆದರೆ ಆರು ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ. ದರ್ಶನ್‌ಗೆ ಹೆಚ್ಚಿನ ಷರತ್ತುಗಳನ್ನೇನೂ ನ್ಯಾಯಾಧೀಶರು ವಿಧಿಸಿಲ್ಲ. ಎಸ್‌ಪಿಪಿ ಮನವಿ ಮೇರೆಗೆ ಪಾಸ್ಪೋರ್ಟ್ ವಶಕ್ಕೆ ನೀಡುವಂತೆ ಸೂಚಿಸಲಾಗಿದೆ. ಇದರ ಜೊತೆಗೆ ದರ್ಶನ್ ಇಚ್ಛಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ಒಂದು ವಾರದ ಒಳಗಾಗಿ ನ್ಯಾಯಾಲಯಕ್ಕೆ ಚಿಕಿತ್ಸೆಯ ವಿವರಗಳನ್ನು ಸಲ್ಲಿಸಬೇಕಿದೆ.
ಬಳ್ಳಾರಿ ಸೆಂಟ್ರಲ್ ಜೈಲ್‌ನಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯಲು ನಟ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡುವಂತೆ ದರ್ಶನ್ ಪರ ವಕೀಲರಾದ ಸಿ.ವಿ ನಾಗೇಶ್ ಪೀಠದ ಮುಂದೆ ಮನವಿ ಸಲ್ಲಿಸಿದ್ದರು. ದರ್ಶನ್ ಜಾಮೀನು ಅರ್ಜಿಗೆ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಪ್ರಸನ್ನ ಕುಮಾರ್ ಆಕ್ಷೇಪ ಮಾಡಿದ್ದರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿಗಳು ಇಂದಿಗೆ ಆದೇಶವನ್ನು ಕಾಯ್ದಿರಿಸಿದ್ದರು. ಇಂದು ಬೆಳಗ್ಗೆ ಆದೇಶ ಪ್ರಕಟಿಸಿದ ನ್ಯಾಯಮೂರ್ತಿಗಳು ದರ್ಶನ್ ಅವರಿಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದರು.
ದರ್ಶನ್ ಪರ ವಾದಿಸಿದ್ದ ಖ್ಯಾತ ವಕೀಲ ಸಿ.ವಿ ನಾಗೇಶ್, ವೈದ್ಯಕೀಯ ಚಿಕಿತ್ಸೆಯ ಆಧಾರದಲ್ಲಿ ಜಾಮೀನಿಗೆ ಮನವಿ ಮಾಡಿದ್ದರು. ಬಳ್ಳಾರಿ ಜೈಲಿನಲ್ಲಿ ದರ್ಶನ್ ಬೆನ್ನುಮೂಳೆ ನೋವಿನಿಂದ ಬಳಲುತ್ತಿದ್ದಾರೆ, ಸರಿಯಾಗಿ ರಕ್ತ ಪರಿಚಲನೆ ಆಗುತ್ತಿಲ್ಲ, ಕಾಲು ಮರಗಟ್ಟುವಿಕೆ ಆಗುತ್ತಿದೆ, ಅವರಿಗೆ ಸರಿಯಾಗಿ ನಡೆಯಲೂ ಆಗುತ್ತಿಲ್ಲ, 2022-23ರಲ್ಲೂ ದರ್ಶನ್ ಈ ಸಮಸ್ಯೆಗೆ ಚಿಕಿತ್ಸೆ ಪಡೆದುಕೊಂಡಿದ್ದರು, ಇದು ಮುಂದುವರಿದರೆ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತದೆ, ಶಸ್ತ್ರ ಚಿಕಿತ್ಸೆ ನಡೆಸದಿದ್ದರೆ ಪ್ಯಾರಾಲಿಸಿಸ್‌ಗೆ ತುತ್ತಾಗಬಹುದು, ಹೀಗಾಗಿ ದರ್ಶನ್ ಅವರಿಗೆ ಸರ್ಜರಿ ಮಾಡಬೇಕಾದ ಅಗತ್ಯ ಇರುವುದರಿಂದ ಜಾಮೀನು ನೀಡಬೇಕು ಎಂದು ಹೈಕೋರ್ಟ್ ಪೀಠದ ಮುಂದೆ ಮನವಿ ಮಾಡಿದ್ದರು. ದರ್ಶನ್ ಅವರ ವೈದ್ಯಕೀಯ ವರದಿಯನ್ನು ಪೀಠಕ್ಕೆ ಸಲ್ಲಿಸಿದ್ದರು.
Share